ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೆಸ್ಟ್ ಸರಣಿಯ ಸೋಲಿನ ನಂತರ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಕೊಹ್ಲಿ ತನ್ನ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ನೀಡಿದ್ದಾರೆ. ಟೆಸ್ಟ್ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರವನ್ನು ಕೊಹ್ಲಿ ತೆಗೆದುಕೊಂಡಿದ್ದಾರೆ. ಈ ಮಾಹಿತಿಯನ್ನು ಕೊಹ್ಲಿ, ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
7 ವರ್ಷಗಳ ಕಾಲ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿ, ಅದ್ಭುತ ಅನುಭವ ಪಡೆದಿದ್ದೇನೆಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ. ಟಿ 20 ವಿಶ್ವಕಪ್ ನಂತರ ಕೊಹ್ಲಿ ಟಿ 20 ತಂಡದ ನಾಯಕತ್ವ ತೊರೆದಿದ್ದರು. 2014 ರಲ್ಲಿ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವ ವಹಿಸಿಕೊಂಡಿದ್ದರು. ಧೋನಿ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ ನಂತರ, ಕೊಹ್ಲಿಯನ್ನು ಟೆಸ್ಟ್ ತಂಡದ ನಾಯಕರನ್ನಾಗಿ ನೇಮಿಸಲಾಗಿತ್ತು.
ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಅನೇಕ ದಾಖಲೆಗಳನ್ನು ಬರೆದಿದೆ. ಕೊಹ್ಲಿ ನಾಯಕತ್ವದಲ್ಲಿ 68 ಪಂದ್ಯಗಳನ್ನು ಆಡಿರುವ ಭಾರತ 40 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಭಾರತದ ಮೊದಲ ನಾಯಕ ಕೊಹ್ಲಿ. ದಕ್ಷಿಣ ಆಫ್ರಿಕಾ ನೆಲದಲ್ಲಿ 2 ಟೆಸ್ಟ್ ಪಂದ್ಯಗಳನ್ನು ಗೆದ್ದ ಮೊದಲ ಭಾರತೀಯ ನಾಯಕ ಅಲ್ಲದೆ ಇಂಗ್ಲೆಂಡ್ ನೆಲದಲ್ಲಿ 3 ಟೆಸ್ಟ್ ಗೆದ್ದ ಭಾರತದ ಮೊದಲ ನಾಯಕರಾಗಿದ್ದಾರೆ.