
ಶಿವಮೊಗ್ಗ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ದೆಹಲಿಯಿಂದ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದು, ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಐಎಸ್ಎಲ್ ಕಾರ್ಖಾನೆಯ ಪುನಶ್ಚೇತನ, ಬಂಡವಾಳ, ವಿವಿಧ ವಿಭಾಗಗಳ ಪುನಾರಂಭ, ಉತ್ಪಾದನೆ, ಗಣಿ ಸೇರಿ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಕಾರ್ಖಾನೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಹೆಚ್.ಡಿ.ಕೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯವಿರುವ ಬಂಡವಾಳ ಕುರಿತಾಗಿ ಚರ್ಚೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಕಾರ್ಮಿಕರ ಸಮಸ್ಯೆ, ಪೂರ್ಣಾವಧಿ ಕೆಲಸದ ಕುರಿತಾಗಿಯೂ ಅವರು ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರೊಂದಿಗೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಬಿ.ಕೆ. ಸಂಗಮೇಶ್ವರ, ಶಾರದಾ ಪೂರ್ಯಾನಾಯ್ಕ್, ಎಸ್.ಎಲ್. ಬೋಜೇಗೌಡ ಸೇರಿದಂತೆ ಹಲವು ಪ್ರಮುಖರು ಇದ್ದರು.
