ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ.
ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳಗಾದ ಯುವಕ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಅವರ ಕೈಬೆರಳು ತುಂಡಾಗಿದೆ. ತಲೆಗೆ ತೀವ್ರ ಗಾಯವಾಗಿದೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅದೇ ಗ್ರಾಮದ ಮಂಜುನಾಥ, ನರೇಂದ್ರ, ಗಣೇಶ, ಮಹೇಶ ಎಂಬುವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಗೋವರ್ಧನ ಆರೋಗ್ಯ ವಿಚಾರಿಸಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಘಟನೆ ನಡೆದಿದೆ.