ಬೆಂಗಳೂರು: ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಮತ್ತು ಸರ್ಕಾರಕ್ಕೆ ಸೂಚಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಅವಕಾಶ ಹಾಗೂ ಅಧಿಕಾರವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರಸ್ತುತ ವಿಧಾನ ಪರಿಷತ್ ಚುನಾವಣೆಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಮತದಾನ ಮಾಡಲು ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಮತಗಟ್ಟೆಗಳನ್ನು 160ರಿಂದ 250 ಕ್ಕೆ ಹೆಚ್ಚಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಯಾದಗಿರಿ ಜಿಲ್ಲೆ ಶಹಪುರ ತಾಲೂಕಿನ ಸೈಯದ್ ಕಲೀಲ್ ವುಲ್ಲಾ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ನೇತೃತ್ವದ ವಿಭಾಗಿಯ ಪೀಠ ಈ ರೀತಿ ಅಭಿಪ್ರಾಯಪಟ್ಟಿದೆ.