ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ, ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿದೆ. ಸೋಮವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಿ ಮತ ಯಾಚಿಸಲಿದ್ದಾರೆ.
ಮತದಾರರ ಮನವೊಲಿಸಿಕೊಳ್ಳಲು ಇವತ್ತೇ ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಮತ್ತು ಬೆಂಬಲಿಗರು ಕಾರ್ಯಕರ್ತರು ಅಂತಿಮ ಹಂತದ ಕಸರತ್ತು ನಡೆಸಲಿದ್ದಾರೆ. ನಾಳೆ ಮಂಗಳವಾರ ಬೆಳಗ್ಗೆ 7ರಿಂದ 14 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಲಿದೆ. ಮತದಾನ ಮುಕ್ತಾಯಕ್ಕೆ 48 ಗಂಟೆಗಳು ಮೊದಲು ಭಾನುವಾರ ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರ ಮುಕ್ತಾಯವಾಗಿದ್ದು, ಸೋಮವಾರ ಇಡೀ ದಿನ ಅಭ್ಯರ್ಥಿಗಳು ಮತ್ತು ಬೆಂಬಲಿಗರು, ಕಾರ್ಯಕರ್ತರು ಮನೆ ಮನೆ ಪ್ರಚಾರ ನಡೆಸಲಿದ್ದಾರೆ.
14 ಕ್ಷೇತ್ರಗಳಲ್ಲಿ 206 ಪುರುಷರು 21 ಮಹಿಳೆಯರು ಸೇರಿ 227 ಮಂದಿ ಕಣದಲ್ಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾ ಪ್ರಹ್ಲಾದ್ ಜೋಶಿ, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಈಶ್ವರ್ ಖಂಡ್ರೆ ಅವರ ಮಕ್ಕಳು ಕಣದಲ್ಲಿದ್ದಾರೆ.
ಶಿವಮೊಗ್ಗ, ದಾವಣಗೆರೆ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ಬೀದರ್, ರಾಯಚೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ಚಿಕ್ಕೋಡಿ, ಬೆಳಗಾವಿ ಕ್ಷೇತ್ರಗಳಲ್ಲಿ ಮಂಗಳವಾರ ಮತದಾನ ನಡೆಯಲಿದೆ.