alex Certify ‘ನಾವು ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ’ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಾವು ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.  ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿಎಂ ವಿಪಕ್ಷಗಳ ಆರೋಪಕ್ಕೆ ಟಾಂಗ್ ನೀಡಿದ್ದಾರೆ.  

ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ. ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...