ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತಾಗಿ ಡಾ. ಕಸ್ತೂರಿರಂಗನ್ ವರದಿಯನ್ನು ರಾಜ್ಯ ಸಚಿವ ಸಂಪುಟ ಸಂಪೂರ್ಣವಾಗಿ ತಿರಸ್ಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.
ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು 2024ರ ಜುಲೈ 31 ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಮತ್ತು ಸಲಹೆಗಳಿದ್ದಲ್ಲಿ 60 ದಿನದಲ್ಲಿ ಸಲ್ಲಿಸಲು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ಕಸ್ತೂರಿರಂಗನ್ ವರದಿ ತಿರಸ್ಕಾರಕ್ಕೆ ನಿರ್ಧಾರ ಕೈಗೊಂಡಿದೆ.
ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ. ಕಸ್ತೂರಿ ರಂಗನ್ ವರದಿಯ ಅನ್ವಯ 20668 ಚ.ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಗುರುತಿಸಲಾಗಿದೆ. ವಾಸ್ತವ ಲೋಪಗಳ ತಿದ್ದುಪಡಿ ಮಾಡಿದಾಗ ಪರಿಸರ ಸೂಕ್ಷ್ಮ ಪ್ರದೇಶ 19,252.70 ಚ.ಕಿ.ಮೀ. ಆಗುತ್ತದೆ. ವಿವಿಧ ಕಾನೂನುಗಳ ಅಡಿಯಲ್ಲಿ ಸಂರಕ್ಷಿತ ಪ್ರದೇಶ, ಅಧಿಸೂಚಿತ ಅರಣ್ಯ ಪ್ರದೇಶ, ಪರಿಸರ ಸೂಕ್ಷ್ಮ ವಲಯವಾಗಿ ಅಧಿಸೂಚಿಸಿ ಅರಣ್ಯ ಅಥವಾ ಪರಿಸರ ಸೂಕ್ಷ್ಮ ವಲಯವಾಗಿ ಅಧಿಸೂಚಿಸಿ 16036 ಚ.ಕಿ.ಮೀ, ಪ್ರದೇಶ ಸಂರಕ್ಷಿಸಲಾಗುತ್ತಿದೆ.
ಪಶ್ಚಿಮ ಘಟ್ಟಗಳ ಪ್ರದೇಶವನ್ನು ಉನ್ನತ ಮಟ್ಟದ ಕಾರ್ಯನಿರತ ತಂಡವು ಕೇವಲ ದೂರ ಸಂವೇದಿ ದತ್ತಾಂಶದ ಆಧಾರದ ಮೇಲೆ ಪಶ್ಚಿಮ ಘಟ್ಟಗಳ ಪ್ರದೇಶ ನಿಗದಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲಾಗಿದೆ ಎಂದು ಹೇಳಲಾಗಿದೆ.