ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ನವದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದ ವಿಚಾರ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದ್ದು, ಇದೀಗ ಸತೀಶ್ ಜಾರಕಿಹೊಳಿ ಈ ಕುರಿತಂತೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಹೋದಾಗ ಆಕಸ್ಮಿಕವಾಗಿ ದೇವೇಗೌಡರನ್ನು ಭೇಟಿಯಾಗಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಈ ಭೇಟಿ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದ್ದು, ಆದರೆ, ಭೇಟಿ ಸಂದರ್ಭದಲ್ಲಿ ಯಾವುದೇ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಿಲ್ಲ, ಕೇವಲ ಆರೋಗ್ಯ ವಿಚಾರಿಸಿದ್ದಾಗಿ ಸಚಿವ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
“ಜಿಲ್ಲೆಯ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲೇ ಕಾರ್ಖಾನೆ ನಿರ್ಮಾಣದ ಬಗ್ಗೆ ಹೆಚ್ಚು ಆದ್ಯತೆ ನೀಡುವಂತೆ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದೇನೆ. ಜಿಲ್ಲೆಯ ಅಭಿವೃದ್ಧಿಯೇ ನನ್ನ ಗುರಿ” ಎಂದು ಸಚಿವರು ಹೇಳಿದ್ದಾರೆ. ಈ ಭೇಟಿ ಆಕಸ್ಮಿಕವಾಗಿ ನಡೆದಿದ್ದರೂ, ರಾಜ್ಯ ರಾಜಕಾರಣದಲ್ಲಿ ಇದರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.