ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಫಲಿತಾಂಶವು 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಾಂದಿಯಾಗಲಿದೆ ಎಂದು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಪಕ್ಷವು 141 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಕಾಂಗ್ರೆಸ್ ಗೆದ್ದರೆ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಪ್ರಶ್ನೆಗೂ ಅವರು ಉತ್ತರಿಸಿದ್ದಾರೆ.
ಮೊದಲು ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಬೇಕು. ಮುಖ್ಯಮಂತ್ರಿಯನ್ನು ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತನ್ನದೇ ಆದ ಚುನಾವಣಾ ಪ್ರಕ್ರಿಯೆಯ ಮೇಲೆ ನಿರ್ಧರಿಸುತ್ತದೆ ಎಂದರು.
ಸಿಎಂ ಸ್ಥಾನಕ್ಕಾಗಿ ತಮ್ಮ ಹಾಗೂ ಸಿದ್ದರಾಮಯ್ಯ ಅವರ ನಡುವಿನ ಪೈಪೋಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಜಗಳ ಎಲ್ಲಿದೆ ? ನೀವು ನನಗೆ ಒಂದು ಉದಾಹರಣೆ, ಒಂದು ಘಟನೆ, ಯಾವುದಾದರೂ ಒಂದು ಸಣ್ಣ ವ್ಯತ್ಯಾಸವನ್ನು ತೋರಿಸಿ. ನಾನು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪನವರಂತೆ ಹುದ್ದೆಗಾಗಿ ಅಳಲಿಲ್ಲ. ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಒಗ್ಗಟ್ಟಿನಿಂದ ಕೆಲಸ ಮಾಡಿದ್ದೇವೆ, ಒಗ್ಗಟ್ಟಿನಿಂದ ಹೋರಾಡುತ್ತಿದ್ದೇವೆ. ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದರು.
ಇದೇ ವೇಳೆ ಮಾತನಾಡಿದ ಅವರು ಮೇ 10 ರ ಚುನಾವಣೆಯಲ್ಲಿ ಸೋಲುವ ಭಯದಿಂದ ಆಡಳಿತಾರೂಢ ಬಿಜೆಪಿ ತನ್ನ ಸಂಪೂರ್ಣ ಕೇಂದ್ರ ನಾಯಕತ್ವವನ್ನು ರಾಜ್ಯದಲ್ಲಿ ಪ್ರಚಾರಕ್ಕೆ ನಿಯೋಜಿಸುತ್ತಿದೆ . ರಾಜ್ಯದಲ್ಲಿ ‘ಮೋದಿ ಫ್ಯಾಕ್ಟರ್’ ಕೆಲಸ ಮಾಡುವುದಿಲ್ಲ ಎಂದರು.