ಬೆಂಗಳೂರು : ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ನನ್ನ ತಪ್ಪು ಏನೂ ಇಲ್ಲದೆ ಇದ್ದರೂ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ್ಯ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ. ಮೂಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ. ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ. ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟೀಸು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೆ.ಜೆ.ಅಬ್ರಹಾಂ ಅವರ ಇತಿಹಾಸ ನೋಡಿದರೆ ಅವರೊಬ್ಬ ಬ್ಲಾಕ್ ಮೇಲರ್ ಎಂದು ಗೊತ್ತಾಗುತ್ತದೆ. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ಅಬ್ರಹಾಂ ಅವರು ಜುಲೈ 26 ರಂದು 11.30 ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರ ಬೆಂಬಲದಿಂದ ಆಯ್ಕೆಯಾದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರವಾಗಿ ನಿರ್ಧಾರ ಮಾಡಿದ್ದಾರೆ. ಅಂದೇ ನೋಟೀಸು ನೀಡಿದ್ದಾರೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2.00 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.