
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ.
ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ ಪತ್ನಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. 14 ವರ್ಷಗಳಿಂದ ಜೊತೆಯಾಗಿ ಜೀವನ ನಡೆಸಿದ್ದ ದಂಪತಿ ನಡುವೆ ಕೌಟುಂಬಿಕ ಕಲಹ ಇತ್ತು. ತಿಂಗಳ ಹಿಂದೆ ಮೂವರು ಹೆಣ್ಣು ಮಕ್ಕಳೊಂದಿಗೆ ನೀಲಾವತಿ ತವರಿಗೆ ಹೋಗಿದ್ದರು. ಶನಿವಾರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಗಂಡನ ಮನೆಗೆ ಬಂದ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ಲೋಕೇಶ್ ಜಗಳವಾಡಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ನೀಲಾವತಿಯನ್ನು ಸ್ಥಳೀಯರು ತುಮರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ತುರ್ತು ಲಾಂಚ್ ವ್ಯವಸ್ಥೆ ಮೂಲಕ ಸಾಗರದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.