
ಬಾಲಿವುಡ್ ನಟಿ ಕಂಗನಾ ರಣಾವತ್ ಈಗಾಗಲೇ ಬಿಜೆಪಿಯೊಂದಿಗೆ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಪ್ರತಿ ಪಕ್ಷಗಳ ವಿರುದ್ಧ ಆಗಾಗ ಕಿಡಿ ಕಾರುವ ಕಂಗನಾ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುವ ಸಿದ್ಧತೆಯಲ್ಲಿದ್ದಾರೆ.
ಇದರ ಮಧ್ಯೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಕಂಗನಾ ರಣಾವತ್ ತಂದೆ ಅಮರದೀಪ್, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ತಮ್ಮ ಪುತ್ರಿ ಸ್ಪರ್ಧಿಸುವುದು ಖಚಿತ ಎಂದು ತಿಳಿಸಿದ್ದಾರೆ.
ಇದರ ಮಧ್ಯೆ ಡಿಸೆಂಬರ್ 17ರಂದು ಕಂಗನಾ ರಣಾವತ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಅವರಿಂದ ಪೂರಕ ಪ್ರತಿಕ್ರಿಯೆ ಸಿಕ್ಕಿದೆ ಎನ್ನಲಾಗಿದೆ. ಪ್ರಸ್ತುತ ಕಂಗನಾ, ತುರ್ತು ಪರಿಸ್ಥಿತಿ ಕುರಿತಾಗಿನ ‘ಎಮರ್ಜೆನ್ಸಿ’ ಹೆಸರಿನ ಸಿನಿಮಾದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಪಾತ್ರವನ್ನು ನಿರ್ವಹಿಸಿದ್ದು, ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗುವ ನಿರೀಕ್ಷೆ ಇದೆ.