ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಮುಂದಿನ ತಿಂಗಳು ಡಿ. 7 ರಂದು ಪ್ರಾರಂಭವಾಗಲಿದೆ. ಡಿಸೆಂಬರ್ 29 ರವರೆಗೆ ಅಧಿವೇಶನ ಮುಂದುವರಿಯಲಿದೆ.
23 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, 16 ದಿನ ಕಾರ್ಯಕಲಾಪ ನಡೆಯಲಿದೆ. ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿಗಳು ದಿನಾಂಕಗಳನ್ನು ಸೂಚಿಸಿದ್ದಾರೆ.
ಸಂಸತ್ತಿನ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರಗಳು ಮತ್ತು ಇತರ ವಿಷಯಗಳ ಬಗ್ಗೆ ರಚನಾತ್ಮಕ ಚರ್ಚೆ ಮತ್ತು ಚರ್ಚೆಗಳನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಅರ್ಥಪೂರ್ಣ ಚರ್ಚೆ ನಡೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಮೊದಲ ದಿನ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗ ಮೊದಲಾದ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಮುಂದಾಗಿವೆ.