ಮಡಿಕೇರಿ: ಮೇ ತಿಂಗಳವರೆಗೆ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಹಣ ನೀಡಿದ್ದು, ಜೂನ್, ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಕೊಡುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ಎಂದು ಹೇಳಿದ್ದಾರೆ.
ಮನೆ ಸಂಪೂರ್ಣ ಹಾನಿಯದವರಿಗೆ 1.2 ಲಕ್ಷ ರೂ. ಪರಿಹಾರ ನೀಡಲಾಗುವುದು. ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಕೊಡಲಾಗುವುದು. ಭಾಗಶಃ ಮನೆ ಹಾನಿಯಾದವರಿಗೆ 50,000ರೂ. ಪರಿಹಾರ ನೀಡಲಾಗುವುದು. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ 16 ಜಾನುವಾರು ಮೃತಪಟ್ಟಿದ್ದು, ಒಂದೊಂದು ಜಾನುವಾರಿಗೆ 33 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ 14 ಕಡೆ ಕಾಳಜಿ ಕೇಂದ್ರ ಸ್ಥಾಪಿಸಲಾಗಿದೆ. 186 ಜನ ಕಾಳಜಿ ಕೇಂದ್ರದಲ್ಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಶೇಕಡ 50ರಷ್ಟು ಮಳೆ ಹೆಚ್ಚಾಗಿದೆ. ಹೆಚ್ಚು ಪಡೆ ಭೂಕುಸಿತವಾಗಿದೆ. 24 ಗಂಟೆಯಲ್ಲಿ ಎರಡು ಕಡೆ ಬೂಕುಸಿತ ಸಂಭವಿಸಿದೆ. ಅದೃಷ್ಟವಶಾತ್ ಪ್ರಾಣ ಹಾನಿಯಾಗಿಲ್ಲ. ಕೆಲವರಿಗೆ ಗಾಯಗಳಾಗಿವೆ. ಮಳೆ ನಿಂತ ತಕ್ಷಣ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 746 ಕೋಟಿ ರೂ. ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ರೂ. ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ಹೇಳಿದ್ದಾರೆ.