ಬೆಂಗಳೂರು: ಏಪ್ರಿಲ್ 1 ರಿಂದ ಮಹಿಳಾ ನೌಕರರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ವಿಧಾನಸೌಧ ಎದುರು ಕೆಎಸ್ಆರ್ಟಿಸಿ ಅಂಬಾರಿ ಉತ್ಸವ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಸಿಎಂ ಮಾತನಾಡಿ, ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕೆಂಬ ಉದ್ದೇಶದಿಂದ ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಡುವ ಯೋಜನೆ ರೂಪಿಸಲಾಗಿದ್ದು, ಅಗತ್ಯವಾದರೆ ಇನ್ನಷ್ಟು ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹಣಕಾಸು ಇತಿಮಿತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ನೌಕರರೊಂದಿಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.