ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡಲು ‘ಶಕ್ತಿ’ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಶಕ್ತಿ ಸ್ಮಾರ್ಟ್ ಕಾರ್ಡ್ ಗಳಿಗಾಗಿ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಸ್ಮಾರ್ಟ್ ಕಾರ್ಡ್ ಪಡೆಯುವ ತನಕ ಪ್ರಯಾಣಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಿಗೆ ಪತ್ರ, ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಸಂಸ್ಥೆಗಳು ವಿತರಿಸುವ ಗುರುತಿನ ಚೀಟಿ ಹಾಗೂ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಕಲ್ಯಾಣ ನಿರ್ದೇಶನಾಲಯದ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು. ಮಹಿಳಾ ಪ್ರಯಾಣಿಕರು ಪ್ರಯಾಣ ಸಂದರ್ಭದಲ್ಲಿ ಶೂನ್ಯ ಮೊತ್ತ ಟಿಕೆಟ್ ಪಡೆದುಕೊಳ್ಳಬೇಕು.
ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅನ್ವಯವಿದ್ದು, ಅಂತರ ರಾಜ್ಯ ಪ್ರಯಾಣಕ್ಕೆ ಅವಕಾಶವಿಲ್ಲ. ಇಟಿಎಂ ತಂತ್ರಾಂಶದಲ್ಲಿ ಉಚಿತ ಟಿಕೆಟ್ ವಿತರಣೆಗಾಗಿ ಅಗತ್ಯ ಮಾರ್ಪಾಡು, ಸಿಬ್ಬಂದಿಗೆ ಸೂಕ್ತ ತರಬೇತಿ. ಗುರುತಿನ ಚೀಟಿ ಪರಿಶೀಲಿಸಿ ಶೂನ್ಯ ಟಿಕೆಟ್ ವಿತರಣೆ ಮಾಡಲಾಗುತ್ತಿದೆ. ಮುಂಗಡ ಬುಕಿಂಗ್ ಸೌಲಭ್ಯವಿರುವ ಬಸ್ಸುಗಳಲ್ಲಿ ಮಹಿಳೆಯರಿಗೆ ಮುಂಗಡ ಆಸನ ಕಾಯ್ದಿರಿಸುವ ಅವಕಾಶವಿದೆ.
ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಇಟಿಎಂ ಗಳಿಂದ ವಿತರಿಸಲಾದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ನಿಗಮಗಳಿಗೆ ಸರ್ಕಾರದಿಂದ ಹಣ ಪಾವತಿ ಮಾಡಲಾಗುತ್ತದೆ.
ಪುರುಷ ಪ್ರಯಾಣಿಕರಿಗೆ ಆಸನ ಮೀಸಲು :
ಕೆಎಸ್‍ಆರ್‍ಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್ಸುಗಳಲ್ಲಿ (ಅಂತರರಾಜ್ಯ, ಎಸಿ ಮತ್ತು ಐಷಾರಾಮಿ ಬಸ್‍ಗಳನ್ನು ಹೊರತುಪಡಿಸಿ) ಶೇ.50 ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಲಾಗುವುದು.