ಬೆಂಗಳೂರು: ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ಶೇಕಡ 50 ರಷ್ಟು ನೀಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸೂಚಿಸಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗರ್ಭಿಣಿಯರು ಮತ್ತು ಬಾಣಂತಿಯರ ದೈಹಿಕ ಪರಿಸ್ಥಿತಿ ಗಮನಿಸಿ ಕೆಲಸದಲ್ಲಿ ರಿಯಾಯಿತಿ ನೀಡಲಾಗಿದೆ.
ಆರು ತಿಂಗಳು ತುಂಬಿದ ಗರ್ಭಿಣಿಯರಿಗೆ ಹೆರಿಗೆವರೆಗೆ, ಬಾಣಂತಿಯರಿಗೆ ಮಗುವಿನ ಜನನದ ದಿನಾಂಕದಿಂದ 6 ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ 50ರಷ್ಟು ರಿಯಾಯಿತಿ ನೀಡಲಾಗಿದೆ. ಇದಕ್ಕಾಗಿ ಆರೋಗ್ಯ ಇಲಾಖೆ ನೀಡುವ ತಾಯಿ ಕಾರ್ಡ್ ಆಧಾರವಾಗಿ ಪರಿಗಣಿಸಲಾಗುವುದು.
ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ದಿನವೊಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸುವ ಕೆಲಸದ ಪ್ರಮಾಣದಲ್ಲಿ ಶೇಕಡ 50ರಷ್ಟು ರಿಯಾಯಿತಿ ಇದೆ. ಶೇಕಡ 60ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸುವ ಕೆಲಸದ ಪ್ರಮಾಣದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗಿದೆ.