ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ‘ಇ –ಶ್ರಮ’ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಸಲ ಅಸಂಘಟಿತ ಕಾರ್ಮಿಕರ ನೋಂದಣಿ ನಡೆಯುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ, ಜೀವನ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಸೌಲಭ್ಯ ಸಿಗುತ್ತಿಲ್ಲ. ಅವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಜೀವನ ಭದ್ರತೆ ದೊರೆಯುವಂತಾಗಬೇಕು ಎಂದು ತಿಳಿಸಿದ್ದಾರೆ.
ಆರ್ಥಿಕತೆಯ ತಳಹದಿಯಾಗಿರುವ ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ದೊರಕಿಸಿಕೊಡಬೇಕಿದೆ. ಕೂಲಿ ಕಾರ್ಮಿಕರು, ರೈತ ಕಾರ್ಮಿಕರಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು. ಅರ್ಹ ಫಲಾನುಭವಿಗಳ ನೋಂದಣಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕಲ್ಪನಾ, ಇ- ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಮೊದಲಾದವರು ಇದ್ದರು.