ಬೆಂಗಳೂರು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ. ಪೌರಕಾರ್ಮಿಕರಿಗೆ ಮಾಸಿಕ 2,000 ಸಂಕಷ್ಟ ಭತ್ಯೆ ನೀಡಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಕಾನೂನು ಬದ್ಧವಾಗಿ ಇದನ್ನು ಜಾರಿಗೊಳಿಸಲು ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಹಾಗೂ ಪೌರಕಾರ್ಮಿಕರ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆ ತೀರ್ಮಾನಿಸಿದೆ.
ಆದರೆ, ಮುಖ್ಯಮಂತ್ರಿಯವರು ಲಿಖಿತ ಭರವಸೆ ನೀಡುವವರೆಗೂ ತಮ್ಮ ಅನಿರ್ದಿಷ್ಟಾವಧಿ ಹೋರಾಟ ಮುಂದುವರೆಸುವುದಾಗಿ ಪೌರಕಾರ್ಮಿಕರು ಹೇಳಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಪೌರಕಾರ್ಮಿಕರು ಪ್ರತಿಭಟನೆ ಕೈಗೊಂಡಿದ್ದಾರೆ. ಸ್ವಚ್ಛತೆ ಸೇರಿದಂತೆ ವಿವಿಧ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ರಾಜ್ಯದ ಪೌರಕಾರ್ಮಿಕರು ಪ್ರತಿಭಟನೆ ಕೈಗೊಂಡಿದ್ದು, ಲಿಖಿತ ಭರವಸೆಗೆ ಪಟ್ಟು ಹಿಡಿದಿದ್ದಾರೆ. ಲಿಖಿತ ಭರವಸೆ ನೀಡುವವರೆಗೆ ಅನಿರ್ದಿಷ್ಟಾವಧಿ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ.