ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್ ನಲ್ಲಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಪ್ರತಿಭಟನೆಗೆ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲದರ ಮಧ್ಯೆ ದೆಹಲಿ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳಾ ಕುಸ್ತಿಪಟುಗಳು ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದರು. ಅಲ್ಲದೆ ತಮಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಿದ್ದರು.
ಇದೀಗ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ರೈತ ಸಂಘಟನೆ, ಸಂಯುಕ್ತ ಕಿಸಾನ್ ಮೋರ್ಚಾ ಬಲ ಸಿಕ್ಕಿದ್ದು, ಭಾನುವಾರದಂದು ಸಂಘಟನೆಯ ಮುಖ್ಯಸ್ಥ ರಾಕೇಶ್ ಟಿಕಾಯಕ್ ನೇತೃತ್ವದಲ್ಲಿ ಪಂಜಾಬ್, ಹರಿಯಾಣ, ದೆಹಲಿ ಹಾಗೂ ಉತ್ತರ ಪ್ರದೇಶದ ಸಾವಿರಾರು ರೈತರು ಜಂತರ್ ಮಂತರ್ನಲ್ಲಿ ಪ್ರತಿಭಟನಾ ನಿರತರನ್ನು ಭೇಟಿಯಾಗಿ ತಮ್ಮ ಬೆಂಬಲ ಸೂಚಿಸಿದ್ದಾರೆ.