ಬೆಂಗಳೂರು: ರಾಜ್ಯದ ಸಾಹಿತಿಗಳು, ಚಿಂತಕರಿಗೆ ಜೀವಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಒಬ್ಬ ವ್ಯಕ್ತಿ 7 ಜನ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದಾನೆ ಎಂಬುದು ತನಿಖೆಯಿಂದ ದೃಢಪಟ್ಟಿದೆ. ದಾವಣಗೆರೆ ಮೂಲದ ವ್ಯಕ್ತಿಯೋರ್ವ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ.
ಒಬ್ಬನೇ ಪತ್ರ ಬರೆದು ಬೇರೆ ಬೇರೆ ಜಿಲ್ಲೆಗಳಿಗೆ, ತಾಲೂಕುಗಳಿಗೆ ಹೋಗಿ ಪೋಸ್ಟ್ ಮಾಡಿದ್ದಾನೆ ಎಂಬುದು ಗೊತ್ತಾಗಿದ್ದು, ಆ ವ್ಯಕ್ತಿಯ ಪತ್ತೆಗಾಗಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಲೇಖಕರು, ಸಾಹಿತಿಗಳು ಸೇರಿದಂತೆ ಒಟ್ಟು 30ಕ್ಕೂ ಹೆಚ್ಚು ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಪತ್ರದ ಸಮೇತ ಇತ್ತೀಚಿಗೆ ಸಾಹಿತಿಗಳು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದರು. ತಮಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ತನಿಖೆಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಂಡಿದೆ.