ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ ಎಂದು ಹೇಳಿಕೆ ನೀಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಇತ್ತೀಚೆಗೆ ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಗುಜರಾತ್ ಹತ್ಯಾಕಾಂಡಕ್ಕೆ ಕಾರಣ ಯಾರು? ನರಮೇಧ ಮಾಡಿದವರು ಇಂದು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ. ಅವರ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ಇವೆ. ಇಂಥವರನ್ನು ತಮ್ಮ ಪಕ್ಕದಲ್ಲಿಯೇ ಪ್ರಧಾನಿ ಮೋದಿ ಕೂರಿಸಿಕೊಳ್ಳುತ್ತಾರೆ ಎಂದು ಹೇಳಿದ್ದರು. ಅವರ ಹೇಳಿಕೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಯತೀಂದ್ರ, ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದ್ದ ವಿಚಾರದ ಬಗ್ಗೆ ನಾನು ಹೇಳಿದ್ದೇನೆ ಎಂದು ತಿಳಿಸಿದ್ದರು. ಇದೀಗ ಯತೀಂದ್ರ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಟಿ. ನರಸೀಪುರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಕೆ. ವೆಂಕಟೇಶ್, ಸಿಬಿಐ ವರದಿಯಲ್ಲಿ ಇದ್ದಿದ್ದನ್ನು ಹೇಳಿದ್ದಕ್ಕೆ ಯತೀಂದ್ರ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ಕೊಡಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡಿದ್ದಾರೆ ಎಂದು ಹೇಳಿದ್ದಾರೆ.