ಶಿವಮೊಗ್ಗ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ನೀಡಲು ನಿನ್ನೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಯತ್ನಾಳ್ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಸ್ತಾಪಿಸಿ, ಶಾಸಕ ಯತ್ನಾಳ್ ಅವರಿಗೆ ನೋಟಿಸ್ ನೀಡಿ, ಕರೆದು ಮಾತನಾಡಿ ಎಂದು ರಾಜ್ಯ ಬಿಜೆಪಿ ಉಸ್ತುವಾರಿಯಾಗಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಯತ್ನಾಳ್ ಅವರಿಗೆ ಹಲವು ಬಾರಿ ಸೂಚನೆ ನೀಡಲಾಗಿದ್ದರೂ ಕೂಡ ಅವರು ಮತ್ತೆ ಮತ್ತೆ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಸಭೆಯಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸದಸ್ಯರು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಯತ್ನಾಳ್ ಅವರಿಗೆ ನೋಟಿಸ್ ನೀಡಲು ನಿನ್ನೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ನಿನ್ನೆಯಷ್ಟೇ ಅರುಣ್ ಸಿಂಗ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮೊದಲಾದವರು ಯಡಿಯೂರಪ್ಪ ಅವರ ಬಗ್ಗೆ ಪದೇ ಪದೇ ಹೇಳಿಕೆ ನೀಡುತ್ತಿರುವ ಯತ್ನಾಳ್ ವಿರುದ್ಧ ದೂರು ನೀಡಿದ್ದಾರೆ. ಶಿಸ್ತು ಉಲ್ಲಂಘಿಸುವವರಿಗೆ ಕಠಿಣ ಸಂದೇಶ ರವಾನಿಸಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.