ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಪಾಲನಾ ಸಮಿತಿ ಶೋಕಾಸ್ ನೋಟಿಸ್ ನೀಡಿದ್ದು, ನೋಟಿಸ್ ಬಗ್ಗೆ ಯತ್ನಾಳ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ, ಸ್ವಪಕ್ಷದ ರಾಜ್ಯ ನಾಯಕರ ವಿರುದ್ಧ ನಿರಂತರ ವಾಗ್ದಾಳಿ ಹಿನ್ನೆಲೆಯಲ್ಲಿ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, 10 ದಿನಗಳೊಳಗಾಗಿ ಉತ್ತರ ನೀಡುವಂತೆ ಸೂಚಿಸಲಾಗಿದೆ.
ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡುವ ನೋಟಿಸ್ ಗೆ ಉತ್ತರ ಕೊಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಅವರ ಮುಂದೆ ಪ್ರಸ್ತುತ ಪಡಿಸುತ್ತೇನೆ. ಹಿಂದೂತ್ವದ ಪರ ಹೋರಾಟ, ಭ್ರಷ್ಟಾಚಾರದ ವಿರುದ್ಧ ಹೋರಾಟ, ವಕ್ಫ್ ಸಂಬಂಧಿತ ಸಮಸ್ಯೆಗಳು ಹಾಗೂ ವಂಶ ರಾಜಕಾರಣದ ವಿರುದ್ಧ ಹೋರಾಟ ಸಂಬಂಧ ನನ್ನ ಬದ್ಧತೆ ಅಚಲವಾಗಿ ಇರಲಿದೆ ಎಂದು ಶಾಸಕ ಯತ್ನಾಳ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ನೋಟಿಸ್ ಗೆ ಪ್ರತಿಕ್ರಿಯಿಸಿದ್ದಾರೆ.