
ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟು ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮೋದಿ ಪ್ರಧಾನಿಯಾದ ನಂತರ 75 ವರ್ಷಕ್ಕೆ ಚುನಾವಣೆ ನಿವೃತ್ತಿ ಪರಿಪಾಠ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.
ಹೀಗಾಗಿ ಪಾಪ ಯಡಿಯೂರಪ್ಪ ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆದುಕೊಂಡಿದ್ದಾರೆ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.
ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧಿಸುವ ಬಗ್ಗೆ ಒತ್ತಡ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೈಸೂರು, ಬಸವಕಲ್ಯಾಣದಿಂದ ಒತ್ತಡವಿದೆ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ತಂದೆ ಯಡಿಯೂರಪ್ಪನವರ ಇಚ್ಛೆಯಂತೆ ಪುತ್ರ ನಡೆದುಕೊಳ್ಳುತ್ತಾರೆ ಎಂದರು.
ಸಿದ್ದರಾಮಯ್ಯ ಹುಟ್ಟುಹಬ್ಬ ಅಮೃತ ಮಹೋತ್ಸವದ ಬಗ್ಗೆ ಮಾತನಾಡಿ, ಇವೆಲ್ಲವೂ ನಿವೃತ್ತಿ ಉತ್ಸವಗಳು ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಇನ್ನು 75 ವರ್ಷ ತುಂಬಿಲ್ಲ. ಒಂದು ವರ್ಷ ಮೊದಲೇ 75 ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಮುಂದೆ ಎಂದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ. ಹೀಗಾಗಿ ಒಟ್ಟಿಗೆ ಉತ್ಸವ ಹಾಗೂ ನಿವೃತ್ತಿ ಎರಡು ಆಚರಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮೋತ್ಸವ ಬಗ್ಗೆ ವ್ಯಂಗ್ಯವಾಡಿದ್ದಾರೆ.