ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ನಗರದಲ್ಲಿ ಇಂದು ಬೆಂಬಲಿಗರು, ಹಿತೈಷಿಗಳೊಂದಿಗೆ ಸಭೆ ನಡೆಸಿದ ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಪುತ್ರ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಈಶ್ವರಪ್ಪ ಇಂದು ಸಭೆ ನಡೆಸಿ ತಮ್ಮ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದಾರೆ.
ಯಡಿಯೂರಪ್ಪ ಟಿಕೆಟ್ ಕೊಡುವುದಾಗಿ ಭರವಸೆ ನೀಡಿ ಮೋಸ ಮಾಡಿದ್ದಾರೆ ಎಂದು ಹೇಳಿದ ಈಶ್ವರಪ್ಪ ತೆರೆ ಹಿಂದೆ ನಡೆದ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದಾರೆ.
ಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪ ಪುತ್ರ ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಗೀತಾ ಶಿವರಾಜಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಈಶ್ವರಪ್ಪ ಬಂಡಾಯ ಸ್ಪರ್ಧೆಯಿಂದಾಗಿ ತ್ರಿಕೋನ ಸ್ಪರ್ಧೆ ನಡೆದು ರಾಘವೇಂದ್ರ ಅವರಿಗೆ ಪ್ರಬಲ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.
ಶಿವಮೊಗ್ಗದಲ್ಲಿ ನಾನು ಗೆದ್ದರೆ ಮೋದಿಯನ್ನೇ ಬೆಂಬಲಿಸುತ್ತೇನೆ. ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಶ್ರಮಿಸೋಣ. ಅವರು ಪ್ರಧಾನಿಯಾದ ನಂತರ ನಾವೆಲ್ಲರೂ ಸೇರಿ ಸಂಭ್ರಮಿಸೋಣ ಎಂದು ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿಯ ದೊಡ್ಡ ಸಂಘಟನೆ ಇದೆ. ಪಕ್ಷದ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಬಿಜೆಪಿ ಮತ್ತೊಂದು ಕಾಂಗ್ರೆಸ್ ಪಕ್ಷ ಆಗಬಾರದೆಂದು ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಕೈಗೊಂಡಿದ್ದೇನೆ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಇರಬಾರದು ಎಂಬುದು ನಮ್ಮ ಉದ್ದೇಶವಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಮೂಲೆಗುಂಪು ಮಾಡಲಾಗುತ್ತಿದೆ. ಸಿ.ಟಿ. ರವಿ, ಡಿ.ವಿ. ಸದಾನಂದ ಗೌಡ, ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ತಪ್ಪಿಸಿದ್ದಾರೆ. ಪಕ್ಷದ ನೊಂದ ಕಾರ್ಯಕರ್ತರ ಧ್ವನಿಯಾಗಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.
ನನ್ನ ಎದೆ ಬಗೆದರೆ ಮೋದಿ, ಶ್ರೀರಾಮ ಕಾಣುತ್ತಾರೆ. ಯಡಿಯೂರಪ್ಪ ಎದೆ ಬಗೆದರೆ ಅವರ ಮಕ್ಕಳು, ಶೋಭಕ್ಕ ಕಾಣ್ತಾರೆ ಎಂದು ಕಾರ್ಯಕರ್ತರು ಹೇಳ್ತಾರೆ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದು, ನಾನು ಆಕ್ರೋಶದಿಂದ, ಭಾವೋದ್ವೇಗದಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಹೇಳುತ್ತಿಲ್ಲ. ಈ ಬಗ್ಗೆ ಚರ್ಚೆ ನಡೆಸಿ ಯೋಚಿಸಿಯೇ ತೀರ್ಮಾನ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.