alex Certify BIG NEWS: ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ತಡೆಗೆ ಮಹತ್ವದ ಕ್ರಮಕ್ಕೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ತಡೆಗೆ ಮಹತ್ವದ ಕ್ರಮಕ್ಕೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪರಿಸ್ಥಿತಿ ಕುರಿತು ಇಂದು ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಭೆ ನಡೆಸಿದ್ದಾರೆ.

ಸಭೆ ನಂತರ ಮಾತನಾಡಿದ ಸಿಎಂ, ಕಳೆದ 14 ದಿನಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಮರಣ ಪ್ರಮಾಣ ಕಡಿಮೆಯಾಗಿದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಉಡುಪಿ, ತುಮಕೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಇದು ಕೋವಿಡ್ 19 ರ ಎರಡನೇ ಅಲೆಯ ಮುನ್ಸೂಚನೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದರು.

ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಬೇಕಾಗಿದೆ ಎಂದು ಅಧಿಕಾರಿಗಳು ಸಲಹೆ ನೀಡಿದರು. ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದಿದ್ದಾರೆ. ಆದರೆ, ಇತರ ಮುಂಚೂಣಿಯ ಸಿಬ್ಬಂದಿಯಲ್ಲಿ ಶೇ. 58 ರಷ್ಟು ಮಾತ್ರ ಲಸಿಕೆ ಪಡೆದಿದ್ದಾರೆ. ದೊಡ್ಡ ಅಪಾರ್ಟ್ ಮೆಂಟ್ ಗಳಲ್ಲಿ ಲಸಿಕೆ ಹಾಕಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಮತದಾರರ ಪಟ್ಟಿಯನ್ನು ಆಧರಿಸಿ, ಹಿರಿಯ ನಾಗರಿಕರನ್ನು ಗುರುತಿಸಿ, ಲಸಿಕೆ ಹಾಕುವುದು. ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಲಸಿಕೆ ಕೊಡಿಸಲು ಕ್ರಮ ವಹಿಸಲಾಗುವುದು.

ಕೋವಿಡ್ ನಿಯಂತ್ರಣಕ್ಕಾಗಿ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಕೈಗೊಳ್ಳುವ ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಮಾಡಿರುವ ಸಲಹೆಗಳು ಹೀಗಿವೆ:

* ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಉಲ್ಲಂಘನೆಗೆ ಕಟ್ಟುನಿಟ್ಟಾಗಿ ದಂಡ ವಿಧಿಸುವುದು.

* ಮದುವೆ ಮತ್ತಿತರ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಮಾರ್ಗಸೂಚಿಯಂತೆ ಕಟ್ಟುನಿಟ್ಟಾಗಿ ನಿಯಂತ್ರಿಸುವುದು.

* ಪರೀಕ್ಷೆಯ ಪ್ರಮಾಣ ಹೆಚ್ಚಿಸುವುದು, ವಿಶೇಷವಾಗಿ ರೋಗ ಲಕ್ಷಣ ಇರುವವರು, ಅಂಗಡಿ ಮಾಲೀಕರು, ಬಸ್ ನಿರ್ವಾಹಕರು ಮತ್ತಿತರರಿಗೆ ಪರೀಕ್ಷೆ ನಡೆಸುವುದು.

* ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯವನ್ನು ಚುರುಕುಗೊಳಿಸುವುದು.

* ಕೋವಿಡ್ ಆಸ್ಪತ್ರೆಗಳು, ಆಕ್ಸಿಜನ್ ಪೂರೈಕೆ ಇರುವ ಹಾಸಿಗೆಗಳು, ಐಸಿಯು ಲಭ್ಯತೆ ಹಾಗೂ ಕೋವಿಡ್ ಕೇರ್ ಸೆಂಟರುಗಳ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳುವುದು.

* ಖಾಸಗಿ ಆಸ್ಪತ್ರೆಗಳೊಂದಿಗೆ ಮಾತುಕತೆ ನಡೆಸಿ, ಹಿಂದಿನಂತೆ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವುದು.

* ಹಿರಿಯ ನಾಗರಿಕರಿಗೆ ಲಸಿಕೆ ಹಾಕುವ ಕಾರ್ಯವನ್ನು ಚುರುಕುಗೊಳಿಸುವುದು. ವಿಶೇಷವಾಗಿ ಗ್ರಾಮೀಣ ಪ್ರದೇಶ ಹಾಗೂ ಕೊಳೆಗೇರಿಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವುದು. ಎಲ್ಲ ಇಲಾಖೆಗಳು ಹಾಗೂ ರೋಟರಿ, ಲಯನ್ಸ್ ಕ್ಲಬ್ ಗಳಂತಹ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳುವುದು.

* ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ನಿಗದಿತ ಸಂಖ್ಯೆ ಮೀರಿ ಪ್ರಯಾಣಿಕರನನ್ನು ಕರೆದೊಯ್ಯದಿರುವುದು.

* ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾದ ಡಾ. ಸಿ.ಎನ್. ಮಂಜುನಾಥ್, ಡಾ. ಸುದರ್ಶನ್, ಡಾ. ರವಿ, ಪ್ರೊ. ಗಿರಿಧರಬಾಬು, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಮೊದಲಾದವರು ತಮ್ಮ ಅಭಿಪ್ರಾಯ ಮಂಡಿಸಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...