
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಇಂದು ಭಾರಿ ಮಳೆ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ, ಉತ್ತರ ಒಳನಾಡಿನ ಒಂದೆರಡು ಕಡೆ ಹಾಗೂ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಇದೆ ವೇಳೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿತ್ರದುರ್ಗ, ಮಂಡ್ಯ, ಮೈಸೂರು, ಕರಾವಳಿಯ ಉತ್ತರ ಕನ್ನಡ, ಉಡುಪಿ ಸೇರಿ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ರಾಯಚೂರು, ಗದಗ, ವಿಜಯಪುರ ಜಿಲ್ಲೆಯ ಕೆಲವೆಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.