ಬೆಂಗಳೂರು: ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳ ವ್ಯಾಪ್ತಿಯ ಒಂದೆರಡು ಕಡೆ ಭಾರಿ ಮಳೆಯೊಂದಿಗೆ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಲೋಮೀಟರ್ ತಲುಪುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ 55 ಕಿ.ಮೀ. ವೇಗದ ಗಾಳಿ ಬೀಸುವ ಸಂಭವವಿದ್ದು, ಮೀನುಗಾರರು ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.