ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮ ಇನ್ನೂ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಇನ್ನು ಮೂರು ದಿನಗಳ ಕಾಲ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳಿಗೆ ನವೆಂಬರ್ 15 ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ನವೆಂಬರ್ 16 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅದೇ ರೀತಿ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಿಗೆ ನವೆಂಬರ್ 15 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ನವೆಂಬರ್ 16 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ನವೆಂಬರ್ 16 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಲವು ಕಡೆ ಭಾರಿ ಮಳೆ ಕಾರಣ ಕೊಯ್ಲಿಗೆ ಬಂದಿದ್ದ ಬೆಳೆ ಹಾಳಾಗುತ್ತಿದ್ದು, ರೈತರಿಗೆ ತೊಂದರೆಯಾಗಿದೆ. ಕಾಫಿ, ಭತ್ತ, ಮೆಕ್ಕೆಜೋಳ ಮೊದಲಾದ ಬೆಳೆಗಳಿಗೆ ಮಳೆಯಿಂದ ಹಾನಿಯಾಗಿದೆ.