ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಇನ್ನೂ ಒಂದು ವಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 25 ರಿಂದ 28 ರ ವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 25 ಮತ್ತು 26ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 25 ರಿಂದ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜುಲೈ 25ರಂದು ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 26ರಂದು ಕಲಬುರಗಿ, ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ 25ರಂದು ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಆಗಲಿದ್ದು, ಬಳಿಕ ಮಳೆಯ ಪ್ರಮಾಣ ಕ್ಷಿಣಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 25ರಂದು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಜುಲೈ 26, 27ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.