ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ಮತ್ತು ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆಯಿಂದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಕಡೆ ಶನಿವಾರ ಸಾಧಾರಣ ಮಳೆ ಆಗಲಿದೆ. ಭಾನುವಾರ ಮಳೆಯ ತೀವ್ರತೆ ಹೆಚ್ಚಾಗುವ ಸಂಭವ ಇದ್ದು, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳ ಹಲವು ಕಡೆ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಪ್ರದೇಶದಲ್ಲಿ ಪ್ರತಿ ಗಂಟೆಗೆ 35 ರಿಂದ 55 ಕಿಮೀ ವರೆಗೆ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಚಂಡಮಾರುತ ವಾತಾವರಣ ಇರಲಿದೆ. ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ತಿಳಿಸಲಾಗಿದೆ.
ಸೋಮವಾರ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ.