
ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ಮುಂಗಾರು ಚುರುಕಾಗಿದ್ದು, ರಾಜ್ಯದ 5 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೋಡಗಳು ದಟ್ಟೈಸಿವೆ. ಪರಿಣಾಮ ಮುಂಗಾರು ಚುರುಕುಕೊಂಡಿದೆ. ಗಾಳಿಯ ದಿಕ್ಕು ಬದಲಾಗಿ ಪಶ್ಚಿಮದಿಂದ ಬೀಸುತ್ತಿದ್ದು, ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ.