ಲಖ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತಂದಿದೆ.
ಕಾನೂನು ಬಾಹಿರ ಮತಾಂತರ ವಿರುದ್ಧ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದ್ದು, ಉಲ್ಲಂಘಿಸಿದವರಿಗೆ 5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು. ಲವ್ ಜಿಹಾದ್ ವಿರುದ್ಧ ಮಸೂದೆಯನ್ನು ಉತ್ತರಪ್ರದೇಶ ಸರ್ಕಾರ ಅಂಗೀಕರಿಸಿದ್ದು, ಕಾನೂನುಬಾಹಿರ ಮತಾಂತರಕ್ಕೆ ಅಪರಾಧಿಗಳಿಗೆ 5 ವರ್ಷದವರೆಗೆ ಜೈಲು ಶಿಕ್ಷೆ ನೀಡಲಾಗುವುದು.
ಬಲವಂತದ ಧಾರ್ಮಿಕ ಮತಾಂತರ ವಿರುದ್ಧ ಕಾನೂನು ತರುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಇತ್ತೀಚೆಗೆ ಹೇಳುತ್ತಿದ್ದು, ಕಾನೂನುಬಾಹಿರ ಧಾರ್ಮಿಕ ಮತಾಂತರ ವಿರುದ್ಧ ಸುಗ್ರೀವಾಜ್ಞೆ ತರಲು ಉತ್ತರಪ್ರದೇಶ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ರಾಜ್ಯ ಕ್ಯಾಬಿನೆಟ್ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ತಿಳಿಸಿದ್ದಾರೆ.
ಜೈಲು ಶಿಕ್ಷೆ ಹೊರತಾಗಿಯೂ ಸುಗ್ರೀವಾಜ್ಞೆಯಡಿ ಬಲವಂತದ ಧಾರ್ಮಿಕ ಮತಾಂತರಕ್ಕೆ 15,000 ರೂ. ದಂಡ ವಿಧಿಸಲಾಗುವುದು. ಪರಿಶಿಷ್ಟ ಜಾತಿ, ಸಮುದಾಯದ ಅಪ್ರಾಪ್ತ ವಯಸ್ಕರು ಮತ್ತು ಮಹಿಳೆಯರ ಮತಾಂತರಕ್ಕೆ 25 ಸಾವಿರ ರೂಪಾಯಿ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲಾಗುವುದು.
ಅರುಣಾಚಲ ಪ್ರದೇಶ, ಒಡಿಶಾ, ಮಧ್ಯಪ್ರದೇಶ, ಛತ್ತಿಸ್ ಗಢ, ಗುಜರಾತ್, ಹಿಮಾಚಲ ಪ್ರದೇಶ, ಜಾರ್ಖಂಡ್ ಉತ್ತರಾಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಧಾರ್ಮಿಕ ಮತಾಂತರವನ್ನು ನಿಯಂತ್ರಿಸುವ ಮತಾಂತರ ವಿರೋಧಿ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಮಧ್ಯಪ್ರದೇಶ ಮತ್ತು ಹರಿಯಾಣ ಬಿಜೆಪಿ ಸರ್ಕಾರಗಳು ಲವ್ ಜಿಹಾದ್ ವಿರುದ್ಧ ಕಾನೂನು ರೂಪಿಸುವುದಾಗಿ ಘೋಷಿಸಿವೆ.