
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗಿಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಸಾಕ್ಷ್ಯ ನಾಶ ಪ್ರಕರಣದ ಬಿ ರಿಪೋರ್ಟ್ ಮರು ತನಿಖೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯ ನಾಶ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಬಂಧಿತರಾಗಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅವರಿಗೆ ಧಾರವಾಡಕ್ಕೆ ಪ್ರವೇಶಿಸುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ.
ಯೋಗೀಶ್ ಗೌಡ ಅವರ ಸೋದರ ಗುರುನಾಥಗೌಡ ನ್ಯಾಯಾಲಯದ ಮೊರೆ ಹೋಗಿದ್ದು, ಡಿಜಿಟಲ್ ಸಾಕ್ಷ್ಯಗಳನ್ನು ಪರಿಗಣಿಸದೇ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಆರೋಪಿಸಿದ್ದಾರೆ. ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕರಣದ ಮರುತನಿಖೆ ನಡೆಸಲು ಸರ್ಕಾರಕ್ಕೆ ಆದೇಶ ನೀಡಿದೆ. 2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್ ಗೌಡರನ್ನು ಕೊಲೆ ಮಾಡಲಾಗಿತ್ತು.