ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.
ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರು ಸೇರಿದಂತೆ ಒಟ್ಟು 17 ಆರೋಪಿಗಳು ವಿಶೇಷ ನ್ಯಾಯಾಲಯದ ಆದೇಶ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.
ಮಾಫಿ ಸಾಕ್ಷಿಯನ್ನಾಗಿಸಿ ಸಾಕ್ಷಿ ವಿಚಾರಣೆ ನಡೆಸಲು ಮೊದಲಿಗೆ ಪಾಟಿ ಸವಾಲು ನಡೆಸಬೇಕು. ಆದರೆ, ಈ ಪ್ರಕರಣದಲ್ಲಿ ಆರೋಪಿಯನ್ನು ಮಾಫಿ ಸಾಕ್ಷಿಯನ್ನಾಗಿಸುವ ಮೊದಲೇ ಮ್ಯಾಜಿಸ್ಟ್ರೇಟ್ ಮುಂದೆ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇದು ಕಾನೂನುಬಾಹಿರ ಕ್ರಮವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.