ಹಾಸನ: ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್(26) ಸಾವನ್ನಪ್ಪಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಾವು ಬದುಕಿನ ಮಧ್ಯೆ ಹರ್ಷಬರ್ಧನ್ ಹೋರಾಟ ನಡೆಸುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ಬಿಹಾರ ಮೂಲದ ಹರ್ಷಬರ್ಧನ್ ಅವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಆಗದ ಸ್ಥಿತಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಹಾಸನ ಖಾಸಗಿ ಆಸ್ಪತ್ರೆಗೆ ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ ಭೇಟಿ ನೀಡಿ ಹರ್ಷಬರ್ಧನ್ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು.
ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮೊಹಮ್ಮದ್ ಸುಜೀತಾ ಆಸ್ಪತ್ರೆಯಲ್ಲೇ ಇದ್ದು, ವೈದ್ಯರಿಂದ ಮಾಹಿತಿ ಪಡೆದಿದ್ದರು. ಕ್ಷಣಕ್ಷಣಕ್ಕೂ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಸ್ಥಿತಿ ಬಿಗಡಾಯಿಸಿ ಕೊನೆಯುಸಿರೆಳೆದಿದ್ದಾರೆ.
ಮೈಸೂರಿನಲ್ಲಿ ಐಜಿಪಿ ಭೇಟಿಯಾಗಿ ಹಾಸನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ಬರುತ್ತಿದ್ದರು. ಹಾಸನ ತಾಲೂಕಿನ ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತಾನೆಗಡಿ ಗ್ರಾಮದ ಬಳಿ ಕಾರ್ ಅಪಘಾತವಾಗಿತ್ತು. ಹರ್ಷಬರ್ಧನ್ ತಲೆಗೆ ಗಂಭೀರವಾದ ಗಾಯಗಳಾಗಿದ್ದವು. ಚಾಲಕ ಮಂಜೇಗೌಡ ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಬಿಹಾರ ಮೂಲದ ಹರ್ಷಬರ್ಧನ್ ಅವರ ತಂದೆ ಮಧ್ಯಪ್ರದೇಶದಲ್ಲಿ ಎಡಿಸಿಯಾಗಿದ್ದಾರೆ. 2022ರ UPSC ಪರೀಕ್ಷೆಯಲ್ಲಿ ಹರ್ಷಬರ್ಧನ್ 153ನೇ ರ್ಯಾಂಕ್ ಪಡೆದುಕೊಂಡಿದ್ದರು. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯನ್ನು ಪಾಸ್ ಮಾಡಿದ್ದರು.
ಮೈಸೂರಿನಲ್ಲಿ ತರಬೇತಿ ಮುಗಿಸಿ ಇಲಾಖಾ ತರಬೇತಿಗೆ ವರದಿ ಮಾಡಿಕೊಳ್ಳಲು ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.