ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮರಳಿದ್ದಾರೆ.
ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರು ಕಡೂರಿನ ದತ್ತ ಅವರ ಮನೆಗೆ ಭೇಟಿ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದು, ದತ್ತ ಅವರು ಕಡೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದ್ದಾರೆ.
ಕಡೂರು ಜೆಡಿಎಸ್ ಅಭ್ಯರ್ಥಿಯಾಗಿ ವೈ.ಎಸ್.ವಿ. ದತ್ತ ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾನು ದತ್ತ ಜೊತೆಗಿರುತ್ತೇನೆ ಎಂದು ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದತ್ತ ದೊಡ್ಡವರು. ನನ್ನ ಜೊತೆ ಸಂಪರ್ಕದಲ್ಲಿಲ್ಲ, ದತ್ತ ಅವಶ್ಯಕತೆ ನನಗಿಲ್ಲ. ಅವರು ಜೆಡಿಎಸ್ ಸೇರ್ಪಡೆಯಾಗಿರುವ ಕುರಿತು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ದತ್ತ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಸೇರಿದ ವೈ.ಎಸ್.ವಿ. ದತ್ತ ಜೆಡಿಎಸ್ ಪಕ್ಷದ ಅಧಿಕೃತ ಹುರಿಯಾಳು ಅಲ್ಲ ಎಂದು ಕಡೂರು ಜೆಡಿಎಸ್ ಅಭ್ಯರ್ಥಿ ಧನಂಜಯ ಹೇಳಿದ್ದಾರೆ.