ಬೆಂಗಳೂರು: ವಸತಿ ಯೋಜನೆಗಳಲ್ಲಿ ಸಂಪೂರ್ಣ ಮೊತ್ತವನ್ನು ಸರ್ಕಾರವೇ ಪಾವತಿಸಿ ಬಡವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತಾಗಿ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲು ಸಚಿವರು ಶುಕ್ರವಾರ ನಡೆದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಆಡಳಿತ ಮಂಡಳಿ ಸಭೆಯಲ್ಲಿ ತಿಳಿಸಿದ್ದಾರೆ.
ಸಬ್ಸಿಡಿ ಹೊರತುಪಡಿಸಿ ಉಳಿದ ಮೊತ್ತವನ್ನು ಸರ್ಕಾರವೇ ಭರಿಸುವಂತಾಗಬೇಕು. ಫಲಾನುಭವಿಗಳಿಂದ ಯಾವುದೇ ಹಣ ಪಡೆದುಕೊಳ್ಳದೆ ಮನೆ ನೀಡಿದಲ್ಲಿ ಬಡವರಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ವಸತಿ ಯೋಜನೆಗಳಲ್ಲಿ ಫಲಾನುಭವಿಗಳ ವಂತಿಗೆ ಪಾವತಿಸದೆ ಅನುಷ್ಠಾನ ಕಷ್ಟವಾಗುತ್ತಿದ್ದು, ಹೀಗಾಗಿ ವಾರ್ಷಿಕ 3 ಲಕ್ಷ ಮನೆ ನಿರ್ಮಾಣ ಬದಲು ಒಂದೂವರೆ ಲಕ್ಷ ಮನೆ ನಿರ್ಮಾಣದ ಗುರಿ ಹಾಕಿಕೊಂಡು ಅವುಗಳನ್ನು ಪೂರ್ಣಗೊಳಿಸಿದರೆ ಯೋಜನೆ ಸಾಕಾರಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.