
ಹೊಸಪೇಟೆ: 2024ರ ಫೆಬ್ರವರಿ 2 ರಿಂದ 3 ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ ಉತ್ಸವ ಉದ್ಘಾಟಿಸಲಿದ್ದಾರೆ. ಉತ್ಸವವನ್ನು ವಿಜೃಂಭಣೆಯಿಂದ ನಡೆಸಲು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸಚಿವರು ಸೂಚನೆ ನೀಡಿದ್ದಾರೆ. ಉತ್ಸವದಲ್ಲಿ ಸ್ಥಳೀಯ ಕಲಾವಿದರು, ಸಾಂಸ್ಕೃತಿಕ ಕಲೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸಂಘಟನೆಗಳು, ಸಾಂಸ್ಕೃತಿಕ ವಲಯದವರನ್ನು ಜೊತೆಗೂಡಿಸಿಕೊಂಡು ಉತ್ಸವದ ಯಶಸ್ವಿಗೆ ಕ್ರಮ ಕೈಗೊಳ್ಳಬೇಕು. ಅದ್ದೂರಿಯಾಗಿ ಉತ್ಸವ ಆಚರಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.