ಬೆಂಗಳೂರು: ಅಕ್ಟೋಬರ್ 30 ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಬಿಜೆಪಿಗೆ ಸಹಾಯ ಮಾಡಲು ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ ಎಂದು ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ.
ದೆಹಲಿಯಿಂದ ಬರುತ್ತಿದ್ದಂತೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೆಂಡಕಾರಿದ ಜಮೀರ್ ಅಹ್ಮದ್, ಕುಮಾರಸ್ವಾಮಿ ಡೀಲರ್ ಎಂದು ಟೀಕಿಸಿದ್ದಾರೆ.
ರಾಜ್ಯಸಭೆ ಚುನಾವಣೆ ವೇಳೆ ಹೆಚ್.ಡಿ.ಕೆ. ವ್ಯವಹಾರ ಮಾಡಿದ್ದಾರೆ. ಈ ಕುರಿತು ಮಾತನಾಡಲು ಅವರನ್ನು ಚರ್ಚೆಗೆ ಕರೆಯಿರಿ. ಹಜ್ ಯಾತ್ರೆ ಉದ್ಘಾಟನೆಗೆ ಮುಖ್ಯಮಂತ್ರಿಗಳು ಬಂದಿದ್ದಾರೆ. ಆದರೆ, ಕುಮಾರಸ್ವಾಮಿ ಉದ್ಘಾಟನೆಗೆ ಬನ್ನಿ ಎಂದರೂ ಬರಲಿಲ್ಲ. ಸಿದ್ದರಾಮಯ್ಯನವರು 5 ವರ್ಷವೂ ಬಂದು ಹಜ್ ಯಾತ್ರೆ ಉದ್ಘಾಟಿಸಿದ್ದಾರೆ. ಇವತ್ತು ಅಲ್ಪಸಂಖ್ಯಾತರ ಬಗ್ಗೆ ಕುಮಾರಸ್ವಾಮಿ ಮಾತನಾಡುತ್ತಾರೆ. ಎರಡು ಕ್ಷೇತ್ರದಲ್ಲಿ ಕುಮಾರಸ್ವಾಮಿ ಮುಸ್ಲಿಂ ಅಭ್ಯರ್ಥಿಗಳನ್ನು ಹಾಕಿದ್ದಾರೆ. ಲಾಭ ಇಲ್ಲದೆ ಅವರು ಯಾವುದೇ ಕೆಲಸ ಮಾಡುವುದಿಲ್ಲ. ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ನವರು ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ. ಬಿಜೆಪಿಗೆ ಲಾಭ ಮಾಡಿಕೊಡಲು ಜೆಡಿಎಸ್ ಅಭ್ಯರ್ಥಿ ಹಾಕಿದ್ದಾರೆ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.