ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 20 ವರ್ಷಗಳ ನಂತರ ಒಕ್ಕಲಿಗ ಸಮುದಾಯಕ್ಕೆ ಉನ್ನತ ಜವಾಬ್ದಾರಿ ನೀಡಿದ್ದು, ಎಲ್ಲರಿಗೂ ಮುಖ್ಯಮಂತ್ರಿ ಆಗುವ ಅವಕಾಶ ನೀಡಿದ್ದೀರಿ. ನನಗೂ ಒಂದು ಅವಕಾಶ ಕೊಡಿ ಎಂದು ಒಕ್ಕಲಿಗರ ಸಮಾರಂಭದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಟಾಂಗ್ ಕೊಟ್ಟಿದ್ದಾರೆ.
ಡಿಕೆಶಿ ಮುಖ್ಯಮಂತ್ರಿ ಹುದ್ದೆಯ ಆಸೆ ಬಗ್ಗೆ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್, ಒಂದು ಸಮುದಾಯದಿಂದ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಸಮುದಾಯದ ಆಧಾರದಲ್ಲಿ ಮುಖ್ಯಮಂತ್ರಿ ಸ್ಥಾನ ನೀಡುವುದಾದರೆ ನಾನು ಆಕಾಂಕ್ಷಿಯಾಗಿದ್ದೇನೆ. ಒಕ್ಕಲಿಗ ಸಮುದಾಯಕ್ಕಿಂತಲೂ ನಮ್ಮ ಸಮುದಾಯ ದೊಡ್ಡದಿದೆ. ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ. ಹಾಗೆಂದು ನಾನು ಮುಖ್ಯಮಂತ್ರಿ ಆಗಲು ಸಾಧ್ಯವೇ? ರಾಜ್ಯಕ್ಕೆ ಒಳ್ಳೆಯದಾಗಬೇಕೆಂದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂಬುದು ಜನರ ಆಸೆಯಾಗಿದ್ದು, ರಾಜ್ಯಕ್ಕೆ ಸಿದ್ದರಾಮಯ್ಯನವರ ಅಗತ್ಯವಿದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ನಾನು ನೀಡಿದ ಹೇಳಿಕೆಗೆ ಬದ್ಧವಾಗಿದ್ದೇನೆ. ರಾಜ್ಯದ ಜನ ಕೂಡ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಬಯಸುತ್ತಿದ್ದಾರೆ ಎಂದು ಹೇಳುವ ಮೂಲಕ ಡಿ.ಕೆ. ಶಿವಕುಮಾರ್ ಸಿಎಂ ಆಸೆಯ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಜಮೀರ್ ಅಹ್ಮದ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಯಾವ ಜಮೀರ್ ಅಹ್ಮದ್? ಅವರಿಗೆ ಉತ್ತರಿಸಲು ನಾನು ತಯಾರಿಲ್ಲ. ಇಂಥವರು ನೂರಾರು ಜನ. ಯಾರು ಏನು ಬೇಕಾದರೂ ಮಾತನಾಡಿದರೂ ಪಕ್ಷ ಅದನ್ನು ಸಮರ್ಥವಾಗಿ ನಿಭಾಯಿಸುತ್ತಿದೆ. ಪಕ್ಷದ ದಾರಿಯಲ್ಲಿ ಹೋಗಬೇಕು. ಪಕ್ಷಕ್ಕೆ ಎಲ್ಲಾ ಸಮುದಾಯದವರು ಪಕ್ಷಕ್ಕೆ ಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಲ್ಲೀಗ ಮುಖ್ಯಮಂತ್ರಿ ಹುದ್ದೆಗೇರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ಧರಾಮಯ್ಯನವರ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮದ ಸಿದ್ಧತೆ ಹೊತ್ತಲ್ಲೇ ಸಿಎಂ ಸ್ಥಾನದ ವಿಚಾರ ಮುನ್ನೆಲೆಗೆ ಬಂದು ಭಾರೀ ಚರ್ಚೆಯಾಗ್ತಿದೆ. ಜಮೀರ್ ನೀಡಿದ ಹೇಳಿಕೆ ಕಾಂಗ್ರೆಸ್ ಬಣ ರಾಜಕೀಯಕ್ಕೆ ಕಿಚ್ಚು ಹಚ್ಚಿದೆ.