ಬೆಳಗಾವಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ.
ಪಹಣಿಯಲ್ಲಿ ವಕ್ಪ್ ಆಸ್ತಿ ನಮೂದು, ರೈತರಿಗೆ ನೋಟಿಸ್ ವಿಚಾರದ ಬಗ್ಗೆ ಜಮೀರ್ ಅಹ್ಮದ್ ಅವರನ್ನು ಟೀಕಿಸುತ್ತಿದ್ದ ಯತ್ನಾಳ್, ಇಂದು ಸುವರ್ಣಸೌಧದ ಕಚೇರಿಯಲ್ಲಿ ಸಚಿವ ಜಮೀರ್ ಅಹ್ಮದ್ ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ.
ಇಂದು ಶಾಸಕ ಯತ್ನಾಳ್ ತಮ್ಮನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಬಗ್ಗೆ ಸಚಿವ ಜಮೀರ್ ಅಹ್ಮದ್ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸಚಿವರನ್ನು ಭೇಟಿಯಾದದ್ದು ಕೇವಲ ಕ್ಷೇತ್ರದ ಅಭಿವೃದ್ಧಿಯ ವಿಚಾರಗಳಿಗೆ ಸಂಬಂಧಿಸಿದಂತೆ ಹೊರತು ಯಾವುದೇ ಚರ್ಚೆಗಲ್ಲ. ವಿಜಯಪುರ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನರ ಆಶೋತ್ತರವನ್ನು ಈಡೇರಿಸಲು ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.