ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ. ಒಬಿಸಿ ಮೀಸಲಾತಿ ಅಂತಿಮಗೊಳ್ಳದ ಚುನಾವಣೆ ನಡೆಸುವುದು ಅಸಾಧ್ಯವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ವಿಧಾನ ಪರಿಷತ್ ನನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ಖಾತರಿಪಡಿಸಿದ ನಂತರವೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಮೂರು ಹಂತದ ಪರಿಶೀಲನೆ ನಂತರ ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ್ದು, ಅದನ್ನು ಪಾಲಿಸುವುದು ಅನಿವಾರ್ಯವಾಗಿದೆ. ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ. ನಿಗದಿಪಡಿಸಿದ ನಂತರವೇ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲಾಗುತ್ತದೆ ಎಂದರು.
ಸುಪ್ರೀಂಕೋರ್ಟ್ಗೆ ಸರ್ಕಾರದ ನಿಲುವು ತಿಳಿಸಲಾಗುತ್ತದೆ. ಕ್ಷೇತ್ರಗಳ ಮರುವಿಂಗಡಣೆ ಹಾಗೂ ಮೀಸಲು ನಿಗದಿ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು ಸುಪ್ರೀಂಕೋರ್ಟ್ ಗಮನಕ್ಕೆ ತರಲಾಗುವುದು. ಸಮಸ್ಯೆ ಬಗೆಹರಿಯದೇ ಚುನಾವಣೆ ನಡೆಸಲು ಆಗುವುದಿಲ್ಲ. ಹಿಂದುಳಿದ ವರ್ಗಗಳಿಗೆ ಮೀಸಲು ಸ್ಥಾನಗಳನ್ನು ಖಾತರಿಪಡಿಸಿದ ನಂತರವೇ ಚುನಾವಣೆ ನಡೆಸಲಾಗುವುದು ಎಂದಿದ್ದಾರೆ.