ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ 5000 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ(ಎಲ್ಕೆಜಿ, ಯುಕೆಜಿ) ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.
ಪೌಷ್ಟಿಕ ಆಹಾರದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಉದ್ದೇಶವಾಗಿದೆ. ಬಿಎ ಬಿಎಡ್, ಎಂಎ. ಎಂಕಾಂ ಪದವಿ ಪಡೆದ ಸುಮಾರು 17000 ಅಂಗನವಾಡಿ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರಿ ಮಾಂಟೆಸ್ಸರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯವು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಅತಿ ಹೆಚ್ಚು ಗೌರವಧನ ನೀಡುವಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರ ಬಗ್ಗೆ ಸರ್ಕಾರ ಕಾಳಜಿ ವಹಿಸಿದೆ. ಹರಿಯಾಣ, ತೆಲಂಗಾಣ, ಕೇರಳ ರಾಜ್ಯಗಳ ನಂತರ ಹೆಚ್ಚು ಗೌರವಧನ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

