ಮಂಗಳೂರು: ಚಾಲಕನ ಮೂಲಕ 50 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಗಣಿ ಇಲಾಖೆ ಉಪ ನಿರ್ದೇಶಕಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳೂರು ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ, ಸಿಬ್ಬಂದಿ ಪ್ರದೀಪ್ ಮೂಲಕ 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕು ಇರಾ ಗ್ರಾಮದಲ್ಲಿರುವ ಜಮೀನಿನಲ್ಲಿ ಮನೆ ಕಟ್ಟುವ ಉದ್ದೇಶದಿಂದ ಕಟ್ಟಡ ಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡುವಂತೆ ಗಣಿ ಇಲಾಖೆಗೆ 2024ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಉಳ್ಳಾಲ ತಹಶೀಲ್ದಾರ್ ಜಮೀನಿನಲ್ಲಿ ಲಭ್ಯವಿರುವ ಕಟ್ಟಡ ಕಲ್ಲು ತೆಗೆಯಲು ಪ್ರಮಾಣ ಪತ್ರ, ದೃಢೀಕರಣ ಪತ್ರ ನೀಡಬಹುದಾಗಿದೆ ಎಂದು 2025 ರಲ್ಲಿ ವರದಿ ಸಲ್ಲಿಸಿದ್ದರು. ಹೀಗಿದ್ದರೂ ಗಣಿ ಇಲಾಖೆ ಅನುಮತಿ ನೀಡಿರಲಿಲ್ಲ. ಗಣಿ ಇಲಾಖೆ ಕಚೇರಿಗೆ ಭೇಟಿ ನೀಡಿದಾಗ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದೆ.
ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬುಧವಾರ ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ, ಚಾಲಕ ಮಧು ಮೂಲಕ 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ(ಪ್ರಭಾರ) ಕುಮಾರಚಂದ್ರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷ ಡಾ.ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜೆ., ಚಂದ್ರಶೇಖರ್, ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ್, ರಾಜೇಂದ್ರ ನಾಯ್ಕ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.