ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಚಾಲನೆ ನೀಡಲಾಗಿದೆ. ಒಟ್ಟು 28 ಗಣೇಶ ಮೂರ್ತಿಗಳ ಅದ್ಧೂರಿ ಮೆರವಣಿಗೆ ಆರಂಭವಾಗಿದ್ದು, ರಾಜ್ಯ ಬಿಜೆಪಿ ನಾಯಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.
ಮದ್ದೂರಿನ ಐಬಿ ಸರ್ಕಲ್ ನಿಂದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಸಾವಿರಾರು ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಕಲಾತಂಡಗಳು, ವಾದ್ಯ ತಂಡಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿವೆ. ಹಿಂದೂ ಸಂಘಟನೆಗಳ ಮುಖಂಡರು, ರಾಜ್ಯ ಬಿಜೆಪಿ ನಾಯಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ಕೈಯಲ್ಲಿ ಕೇಸರಿ ಬಾವುಟ ಹಿಡಿದು ಜಯಘೋಷಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಸಂಸದ ಯದುವೀರ್ ಒಡೆಯರ್, ಶಾಸಕ ಅಶ್ವತ್ಥನಾರಾಯಣ, ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಭಾಗವಿಸಿದ್ದಾರೆ.
ಐಬಿ ಸರ್ಕಲ್ ನಿಂದ ಆರಂಭವಾಗಿರುವ ಮೆರವಣಿಗೆ ಪೇಟೆಬೀದಿ, ಕೊಲ್ಲಿ ಸರ್ಕಲ್ ಮಾರ್ಗವಾಗಿ ಸಾಗಿ ಬಳಿಕ ಶಿಂಷಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಮೆರವಣಿಗೆಯುದ್ಧಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಬಿಗಿ ಭ್ರತೆ ಕೈಗೊಳ್ಳಲಾಗಿದೆ.