ನವದೆಹಲಿ: ಮಹದಾಯಿ ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರ ಅನುಮತಿ ನೀಡುವುದಿಲ್ಲ ಎಂಬುದು ಗೋವಾ ಸಿಎಂ ವೈಯಕ್ತಿಕ ಹೇಳಿಕೆ. ಇದು ಕೇಂದ್ರ ಸರ್ಕಾರದ ಅಧಿಕೃತ ಹೇಳಿಕೆಯಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿಕೆ ಅವರ ವೈಯುಕ್ತಿಕ ಅನಿಸಿಕೆ. ಕೇಂದ್ರ ಸರ್ಕಾರ ಹಾಗೆ ಹೇಳಿಯೇ ಇಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಜೋಶಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವತ್ತೂ ರಾಜಕೀಯ ಮಾಡುವುದಿಲ್ಲ. ಮೂರೂ ರಾಜ್ಯಗಳಿಗೆ ಹೊಂದಿಕೆ ಆಗುವಂತೆಯೇ ನಿರ್ಧಾರ ತೆಗೆದುಕೊಳ್ಳಲಿದೆ. ಅದರಲ್ಲೂ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ ಭಾಗದ ಜನರ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ಧಗೊಂಡಿದೆ ಎಂದು ತಿಳಿಸಿದ್ದಾರೆ.
ಕಳಸಾ ಬಂಡೂರಿ ವಿಚಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡುತ್ತೇನೆ. ಕರ್ನಾಟಕದ ಹಿತಾಸಕ್ತಿ ಕಾಪಾಡುವ ವಿಚಾರದಲ್ಲಿ ಅವರು ನಿಷ್ಪಕ್ಷಪಾತ ನಡೆ ಅನುಸರಿಸುತ್ತಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.