ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡೀಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣವನ್ನು ಪುತ್ತೂರು ವಿಭಾಗಾಧಿಕಾರಿ ಅವರಿಗೆ ಕೋರ್ಟ್ ಹಿಂತಿರುಗಿಸಿದೆ.
ಮುಂದಿನ 15 ದಿನಗಳಲ್ಲಿ ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆಯ ವೇಳೆ ಅರ್ಜಿದಾರರ ವಾದ ಆಲಿಸಬೇಕು. ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬಹುದು ಎಂದು ಉಪವಿಭಾಗಾಧಿಕಾರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ತಮ್ಮನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆ ಮಾನ್ವಿಗೆ ಒಂದು ವರ್ಷ ಗಡೀಪಾರು ಮಾಡಿ 2025ರ ಸೆಪ್ಟೆಂಬರ್ 18ರಂದು ಪುತ್ತೂರು ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಸೋಮವಾರ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ಈ ಆದೇಶ ನೀಡಿದೆ.
