ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸಂಘಟನೆಗೆ ಭರ್ಜರಿ ಸರ್ಜರಿ ನಡೆಸಲು ಎಐಸಿಸಿ ಸಿದ್ಧತೆ ನಡೆಸಿದೆ. ಕೆಪಿಸಿಸಿ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರ ಬದಲಾವಣೆಯ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇದಕ್ಕಾಗಿ ಎಐಸಿಸಿ ವೀಕ್ಷಕರನ್ನು ನೇಮಕ ಮಾಡಲಾಗಿದೆ.
ಹೌದು. ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ಭಾರೀ ಬದಲಾವಣೆಗೆ ವೇದಿಕೆ ಸಿದ್ಧವಾಗಿದ್ದು, ಕೆಪಿಸಿಸಿಯ ಎಲ್ಲಾ ಜಿಲ್ಲಾಧ್ಯಕ್ಷರನ್ನು ಬದಲಾಯಿಸುವ ಪ್ರಕ್ರಿಯೆಗೆ ಎಐಸಿಸಿ ಚಾಲನೆ ನೀಡಿದೆ. ಇದಕ್ಕಾಗಿ ಪ್ರತಿ ಜಿಲ್ಲೆಗೆ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಸ್ಥಳೀಯ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ ಹೊಸ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಜುಲೈ 24ರಂದು ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಈ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಮಾಹಿತಿಯ ಪ್ರಕಾರ, ನೇಮಕಗೊಂಡಿರುವ ವೀಕ್ಷಕರು ರಾಜ್ಯದ ಪ್ರತಿ ಜಿಲ್ಲೆಗೆ ಭೇಟಿ ನೀಡಿ, ಸ್ಥಳೀಯ ನಾಯಕರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ವರದಿ ಸಿದ್ಧಪಡಿಸಲಿದ್ದಾರೆ. ಆ ವರದಿಯ ಆಧಾರದ ಮೇಲೆ ಹೊಸ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯಲಿದೆ. ಜುಲೈ 24ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಅಂತಿಮ ರೂಪ ನೀಡುವ ಸಾಧ್ಯತೆಯಿದೆ.
ಮೊದಲ ಬಾರಿಗೆ ಜಿಲ್ಲೆಯಿಂದಲೇ ಆಯ್ಕೆ ಪ್ರಕ್ರಿಯೆ
ಈ ಬಾರಿ ವಿಶೇಷವಾಗಿ ಜಿಲ್ಲಾ ಮಟ್ಟದಿಂದಲೇ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವ ಕ್ರಮ ಅನುಸರಿಸಲಾಗುತ್ತಿದೆ. ಇದರಿಂದ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯಕ್ಕೂ ಹೆಚ್ಚಿನ ಆದ್ಯತೆ ಸಿಗಲಿದೆ.
ನಿಷ್ಠಾವಂತ ಕಾರ್ಯಕರ್ತರಿಗೆ ಆದ್ಯತೆ
ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ, ಪಕ್ಷ ಸಂಘಟನೆಗೆ ದುಡಿದಿರುವ ನಿಷ್ಠಾವಂತ ಹಾಗೂ ಕ್ರಿಯಾಶೀಲ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.
ಮುಂದಿನ ಹಂತದಲ್ಲಿ ಮತ್ತಷ್ಟು ಬದಲಾವಣೆ
ಜಿಲ್ಲಾಧ್ಯಕ್ಷರ ನೇಮಕಾತಿ ಪೂರ್ಣಗೊಂಡ ಬಳಿಕ ಕೆಪಿಸಿಸಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಪದಾಧಿಕಾರಿಗಳ ಬದಲಾವಣೆ ಪ್ರಕ್ರಿಯೆಯೂ ಆರಂಭವಾಗುವ ಸಾಧ್ಯತೆ ಇದೆ. ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ಮಹತ್ವದ ಬದಲಾವಣೆಗಳಿಗೆ ನಾಂದಿ ಹಾಡುವ ಸಾಧ್ಯತೆ ಇದೆ.

